ನವದೆಹಲಿ, 22ಅಕ್ಟೋಬರ್ (ಹಿ.ಸ):
ಆ್ಯಂಕರ್ :ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಲಖನೌದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡದ ವಿರುದ್ಧ ಶ್ರೀಲಂಕಾ ೫ ವಿಕೆಟ್ಗಳ ಜಯ ಸಾಧಿಸಿದೆ. ಟಾಸ್ ಗೆದ್ದ ನೆದರ್ಲೆಂಡ್ಸ್ ಮೊದಲು ಬ್ಯಾಟಿಂಗ್ ಮಾಡಿ, ೪೯.೪ ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ೨೬೨ ರನ್ ಗಳಿಸಿ, ಶ್ರೀಲಂಕಾಗೆ ೨೬೩ ರನ್ಗಳ ಗೆಲುವಿನ ಗುರಿ ನೀಡಿತು. ಗುರಿ ಬೆನ್ನತ್ತಿದ ಶ್ರೀಲಂಕಾ ೪೮.೨ ಓವರ್ಗಳಲ್ಲಿ ೫ ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ತಲುಪಿತು. ಶ್ರೀಲಂಕಾದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಸದೀರಾ ಸಮರವಿಕ್ರಮ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜರಾದರು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮತ್ತೊಂದು ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ದಕ್ಷಿಣ ಆಫ್ರಿಕಾ ೨೨೯ ರನ್ಗಳ ಜಯ ಸಾಧಿಸಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ ೫೦ ಓವರ್ಗಳಲ್ಲಿ ೭ ವಿಕೆಟ್ ನಷ್ಟಕ್ಕೆ ೩೯೯ ರನ್ ಗಳಿಸಿ, ಇಂಗ್ಲೆಂಡ್ ತಂಡಕ್ಕೆ ೪೦೦ ರನ್ ಗಳ ಗೆಲುವಿನ ಗುರಿ ನೀಡಿತು. ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡ ೨೨ ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ ೧೭೦ ರನ್ ಗಳಿಸಿ ಸೋಲೊಪ್ಪಿಕೊಂಡಿತು. ದಕ್ಷಿಣ ಆಫ್ರಿಕಾ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಹೆನ್ರಿಕ್ ಕ್ಲಾಸೆನ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜರಾದರು. ಧರ್ಮಶಾಲಾದಲ್ಲಿ ಇಂದು ಮಧ್ಯಾಹ್ನ ೨ ಗಂಟೆಗೆ ನಡೆಯುವ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.
ಟೀಮ್ ಇಂಡಿಯಾ ಏಷ್ಯಾಕಪ್ನಿಂದಲೂ ಭರ್ಜರಿ ಫಾರ್ಮ್ನಲ್ಲಿದೆ. ಬ್ಯಾಟಿಂಗ್ ವಿಭಾಗದಲ್ಲಂತು ಬಲಿಷ್ಠವಾಗಿದೆ. ಮೊದಲ 4 ಬ್ಯಾಟರ್ಗಳೇ ಪಂದ್ಯವನ್ನು ಗೆಲ್ಲಿಸಿಕೊಡುತ್ತಿದ್ದಾರೆ. ರೋಹಿತ್, ಗಿಲ್, ಕೊಹ್ಲಿ, ರಾಹುಲ್ ಮಿಂಚುತ್ತಿದ್ದಾರೆ. ಶ್ರೇಯಸ್ ಅಯ್ಯರ್ ಬ್ಯಾಟ್ನಿಂದ ಮಾತ್ರ ನಿರೀಕ್ಷೆಗೆ ತಕ್ಕಂತ ಆಟ ಬರಲಿಲ್ಲ. ಇದರ ನಡುವೆ ಇಂಜುರಿಗೆ ತುತ್ತಾಗಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಈ ಪಂದ್ಯದಿಂದ ಹೊರಗುಳಿದಿದ್ದಾರೆ.
ಪಾಂಡ್ಯ ಜಾಗದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯುವ ಸಂಭವವಿದೆ. ಇವರು ಶನಿವಾರ ರಾತ್ರಿ ಕಠಿಣ ಬ್ಯಾಟಿಂಗ್ ಅಭ್ಯಾಸ ಕೂಡ ನಡೆಸಿದರು. ಅಂತೆಯೆ ಅವಕಾಶ ಕೊಟ್ಟರೂ ಉತ್ತಮ ಪ್ರದರ್ಶನ ನೀಡದ ಕಾರಣ ಶಾರ್ದೂಲ್ ಠಾಕೂರ್ ಬದಲಿಗೆ ಮೊಹಮ್ಮದ್ ಶಮಿಯನ್ನು ಆಡಿಸುವ ಪ್ಲಾನ್ನಲ್ಲಿದೆ. ಧರ್ಮಶಾಲಾ ಮೇಲ್ಮೈ ವೇಗಿಗಳಿಗೆ ಸಾಕಷ್ಟು ನೆರವು ನೀಡುತ್ತದೆ. ಹೀಗಾಗಿ ಶಮಿ 2023 ಆವೃತ್ತಿಯ ಮೊದಲ ವಿಶ್ವಕಪ್ ಆಡಲಿದ್ದಾರೆ ಎಂದು ಹೇಳಲಾಗಿದೆ.
ಹಿಂದೂಸ್ತಾನ್ ಸಮಾಚಾರ್
