


ರಾಯಚೂರು, 9 ನವೆಂಬರ್ (ಹಿ.ಸ):
ಆ್ಯಂಕರ್: ಜನರ ಆರ್ಥಿಕ ಸ್ಥಿತಿ ಸುಧಾರಣೆಯಾದಾಗ ಮಾತ್ರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ ಸುಧಾರಣೆಯಾಗಲು ಸಾಧ್ಯ ಆದ್ದರಿಂದ ಸರ್ಕಾರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ನಿಡಲಾಗುವ ವಿವಿಧ ಯೋಜನೆಗಳನ್ನು ಸರಿಯಾದ ರಿತಿಯಲ್ಲಿ ಸದುಪಯೋಗ ಪಡೆದುಕೊಳ್ಳುವಂತೆ ಸಂಸದ ರಾಜಾ ಅಮರೇಶ್ವರ ನಾಯಕ ಅವರು ಹೇಳಿದ್ದಾರೆ.
ಅವರು ನ.9ರ(ಗುರುವಾರ) ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ನಗರಸಭೆ, ಲಿಂಗಸುಗೂರು, ದೇವದುರ್ಗ, ಮಾನವಿ ಪುರಸಭೆಗಳು ಹಾಗೂ ಕವಿತಾಳ, ಸಿರವಾರ, ಹಟ್ಟಿ ಪಟ್ಟಣ ಪಂಚಾಯತ್ಗಳ ವತಿಯಿಮದ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ, ಆತ್ಮ ನಿರ್ಭರ್ ನಿಧಿ ಯೋಜನೆಯ ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ಯೋಜನೆ ಕುರಿತು ಜಾಗೃತಿ ಹಾಗೂ ಫಲಾನುಭವಿಗಳಿಗೆ ಸಾಲ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಬೀದಿ ಬದಿ ವ್ಯಾಪಾರ ಮಾಡುವ ಬಡವರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಪ್ರಮುಖವಾದ ಯೋಜನೆಯೆಂದರೆ ಅದು ಪ್ರಧಾನಮಂತ್ರಿ ಆತ್ಮ ನಿರ್ಭರ್ ನಿಧಿ ಯೋಜನೆಯಾಗಿದೆ. ಈ ಯೋಜನೆಯಡಿ ಜನರನ್ನು ಸ್ವಾವಲಂಬಿಗಳಾಗಿ ಮತ್ತು ಅವರು ಸ್ವಯಂ ಉದ್ಯೋಗ ಸೃಷ್ಠಿಸಿಕೊಳ್ಳಲು ಮತ್ತು ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ಉತ್ತೇಜನ ನೀಡಲಾಗುತ್ತಿದೆ ಎಂದರು.
ಬೀದಿ ಬದಿ ವ್ಯಾಪಾರಿಗಳು, ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಈ ಯೋಜನೆಯಡಿ ಸಾಲ ಸೌಲಭ್ಯಗಳು ಸೇರಿದಂತೆ ಅನೇಕ ಕಾರ್ಯಕ್ರಮಗಳು ಸೌಲಭ್ಯಗಳನ್ನು ನೀಡಲಾಗುತ್ತದೆ. ಜನರು ತಮ್ಮ ಆರ್ಥಿಕತೆಯ ಅಭಿವೃದ್ಧಿಗೆ ಈ ಯೋಜನೆಯಡಿ ಹೆಚ್ಚಿನ ಜಾಗೃತರಾಗಿ ಅಭಿವೃದ್ಧಿ ಹೊಂದಬೇಕು ಎಂದು ತಿಳಿಸಿದರು.
ಪ್ರಮುಖವಾಗಿ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಿಗಳು ಹೆಚ್ಚಿನ ತೊಂದರೆಯನ್ನು ಅನುಭವಿಸಿದ್ದರು, ಆರ್ಥಿಕವಾಗಿ ಬಹಳ ಕುಗ್ಗಿದ್ದರು, ಈ ಸಮಸ್ಯೆಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಆತ್ಮನಿರ್ಭರ್ ನಿಧಿ ಯೋಜನೆಯಡಿ ಕಿರು ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಹಂತ ಹಂತವಾಗಿ ಈ ಸೌಲಭ್ಯದ ಮೊತ್ತವನ್ನು ಹೆಚ್ಚಿಸಲಾಗುತ್ತದೆ ಎಂದು ಹೇಳಿದರು.
ಇದಕ್ಕೂ ಮೊದಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮಹಿಬೂಬ್ ಜಿಲಾನಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಡೇ-ನಲ್ಮ ಯೋಜನೆಯ ನಗರ ಬೀದಿ ಬದಿ ವ್ಯಾಪಾರಿಗಳ ಬೆಂಬಲ ಉಪಘಟಕದಡಿ ನಗರ ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ, ಮಾರಾಟ ಪ್ರಮಾಣ ಪತ್ರ ವಿತರಣೆ ಹಾಗೂ ‘ಪಟ್ಟಣ ಮಾರಾಟ ಸಮಿತಿ’ ಮುಂತಾದ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿತ್ತು. ಮುಖ್ಯವಾಗಿ ಈ ಯೋಜನೆಗೆ ಕೋವಿಡ್-19 ಲಾಕ್ ಡೌನ್ ಅವಧಿಯು ಬೀದಿ ವ್ಯಾಪಾರಸ್ಥರ ಜೀವನೋಪಾಯದ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಿದ್ದು, ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯ ಅಭಿವೃದ್ಧಿಗಾಗಿ ಹಾಗೂ ಅವರ ವ್ಯವಹಾರವನ್ನು ಪುನರ್ ಪ್ರಾರಂಭಿಸಲು ಬಂಡವಾಳವನ್ನು ಒದಗಿಸುವ ತುರ್ತು ಅವಶ್ಯಕತೆ ಇದ್ದು, ಆದ್ದರಿಂದ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ, ಭಾರತ ಸರ್ಕಾರ ಬೀದಿ ಬದಿ ವ್ಯಾಪಾರಸ್ಥರಿಗೆ ‘ ‘ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ’ ಯ ಯೋಜನೆಯು ಜುಲೈ 2020 ರಿಂದ ಜಾರಿಮಾಡಲಾಯಿತು ಎಂದು ತಿಳಿಸಿದರು.
ಈ ಯೋಜನೆಯು ಕೇಂದ್ರ ಪುರಸ್ಕøತ ಯೋಜನೆಯಾಗಿದ್ದು, ಪೂರ್ಣ ಪ್ರಮಾಣದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ, ಭಾರತ ಸರ್ಕಾರ, ನವದೆಹಲಿ ರವರಿಂದ ಅನುದಾನ ನೀಡಲಾಗುತ್ತದೆ. ಬೀದಿ ವ್ಯಾಪಾರಸ್ಥರಿಗೆ ಕೈಗೆಟುಕುವ ದರದಲ್ಲಿ ಬಂಡವಾಳ ಹಾಗೂ ಸಾಲ ಸೌಲಭ್ಯವನ್ನು ಒದಗಿಸುವುದು. ನಿಯಮಿತವಾಗಿ ಮರುಪಾವತಿಗೆ ಉತ್ತೇಜಿಸುವುದು. ಹಾಗೂ ಡಿಜಿಟಲ್ ವಹಿವಾಟಿಗೆ ಉತ್ತೇಜನೆ ಮತ್ತು ಬಹುಮಾನ ವಿತರಣೆಯ ಉದ್ದೇಶಗಳಾಗಿವೆ ಎಂದರು.
ಇದೇ ವೇಳೆ ಪ್ರಧಾನಮಂತ್ರಿ ಆತ್ಮನಿರ್ಭರ ನಿಧಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ಹಾಗೂ ಕ್ಯೂ.ಆರ್ ಕೊಡ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಗದೀಶ ಗಂಗಣ್ಣನವರ್, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಯಂಕಂಚಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಉಪ್ಪು ರವಿ, ಮಾನವಿ ಪುರಸಭೆ ಮುಖ್ಯಾಧಿಕಾರಿ ಗಂಗಾಧರ, ಮುದಗಲ್ ಪುರಸಭೆ ಮುಖ್ಯಾಧಿಕಾರಿ ನವೀನ್, ಜಿಲ್ಲಾ ಕೌಶಲ್ಯ ಮಿಷನ್ ವ್ಯವಸ್ಥಾಪಕರಾದ ಸುರೇಶ ವಿಬೂತಿ, ರಸೂಲ್, ನವೀನ್, ನಗರಸಭೆ ಅಧಿಕಾರಿ ಕೃಷ್ಣ ಕಟ್ಟಿಮನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
