ಚಳ್ಳಕೆರೆ 25 ಜನವರಿ(ಹಿ.ಸ):
ಆ್ಯಂಕರ್ :
ಸೇತುವೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಭೀಕರ ದುರ್ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪುಟ್ಟ ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ . ಉಳಿದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿಯಾಗಿದೆ. ಈ ಪರಿಣಾಮ ಅಪಘಾತ ಸಂಭವಿಸಿದ್ದು 2 ವರ್ಷದ ಸಿಂಧುಶ್ರೀ, 5 ತಿಂಗಳ ಹಯ್ಯಾಳಪ್ಪ ಎಂಬ ಪುಟ್ಟ ಮಗು, 3 ತಿಂಗಳ ರಕ್ಷಾ ಎಂಬ ಮತ್ತೊಂದು ಮಗು ಸೇರಿ ಲಿಂಗಪ್ಪ (26) ಅವರು ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.
ಕಾರಿನಲ್ಲಿದ್ದ ಇನ್ನುಳಿದ ಯಲ್ಲಮ್ಮ (30), ಮಲ್ಲಮ್ಮ (20), ನಾಗಪ್ಪ(35) ಅವರಿಗೆ ಗಂಭೀರ ಗಾಯಗಳಾಗಿದ್ದು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೃತರು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ. ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪಿಎಸ್ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್
