ನವದೆಹಲಿ, 5 ಮಾರ್ಚ್ :ಆ್ಯಂಕರ್:
ವುಮೆನ್ಸ್ ಪ್ರೀಮಿಯರ್ ಲೀಗ್ ನ 12ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಅಂದರೆ ಮೊದಲಾರ್ಧದ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದು, ಇದೀಗ ದ್ವಿತೀಯಾರ್ಧದ ಪಂದ್ಯಗಳಿಗೆ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಇನ್ನು ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್ನ ಮೊದಲ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿತ್ತು. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಸಿಕ್ಸ್ ಬಾರಿಸಿ ಮುಂಬೈ ಇಂಡಿಯನ್ಸ್ ಜಯ ಸಾಧಿಸಿತ್ತು. ಇದೀಗ 2ನೇ ಮುಖಾಮುಖಿಯಲ್ಲಿ ಮುಂಬೈ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದೆ ಡೆಲ್ಲಿ ಕ್ಯಾಪಿಟಲ್ಸ್.
ಗೆದ್ದವರಿಗೆ ಅಗ್ರಸ್ಥಾನ:
ಉಭಯ ತಂಡಗಳು ಈಗಾಗಲೇ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಒಂದು ವೇಳೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವು ದಾಖಲಿಸಿದರೆ ಪಾಯಿಂಟ್ಸ್ ಟೇಬಲ್ನಲ್ಲಿ 2ನೇ ಸ್ಥಾನದಿಂದ ಮೊದಲ ಸ್ಥಾನಕ್ಕೇರಲಿದೆ. ಹೀಗಾಗಿ ದ್ವಿತೀಯಾರ್ಧದ ಮೊದಲ ಮುಖಾಮುಖಿ ಉಭಯ ತಂಡಗಳಿಗೂ ಮಹತ್ವದ ಪಂದ್ಯವಾಗಿ ಮಾರ್ಪಟ್ಟಿದೆ.
