ಆಲಿಗಡ್ಆ್ಯಂ ಕರ್: ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಸಂಪತ್ತು ಮರುಹಂಚಿಕೆಯ ವಿಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಗುಡುಗಿದ್ದಾರೆ. ಉತ್ತರಪ್ರದೇಶದ ಆಲಿಗಡ್ ನಲ್ಲಿ ಇಂದು ಸೋಮವಾರ ಚುನಾವಣಾ ಪ್ರಚಾರ ನಡೆಸಿದ ಮೋದಿ, ಈ ಜನರಿಗೆ ಮಹಿಳೆಯರ ಮಂಗಳಸೂತ್ರದ ಮೇಲೂ ಕಣ್ಣು ಬಿದ್ದಿದೆ. ಮಾತೆಯರು, ಭಗಿನಿಯರ ಚಿನ್ನವನ್ನು ದೋಚುವ ದುರುದ್ದೇಶ ಇವರದ್ದು ಎಂದು ಪ್ರಧಾನಿಗಳು ಗುಡುಗಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಸಿಕ್ಕರೆ, ಈ ದೇಶದಲ್ಲಿ ಯಾರು ಎಷ್ಟು ಆಸ್ತಿ ಹೊಂದಿದ್ದಾರೆ ಎಂದು ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆ ಕೈಗೊಳ್ಳಲಾಗುವುದು. ಬಳಿಕ ಈ ಆಸ್ತಿಯನ್ನು ಮರು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಹುಲ್ ಗಾಂಧಿ ತಮ್ಮ ಚುನಾವಣಾ ಪ್ರಣಾಳಿಕಯ ಒಂದು ಅಂಶದ ಬಗ್ಗೆ ವಿವರಣೆ ನೀಡಿದ್ದರು. ಇದರ ಬಗ್ಗೆ ನರೇಂದ್ರ ಮೋದಿ ಮಾತನಾಡಿದ್ದಾರೆ.
‘ಅವರ ಸರ್ಕಾರ ಅಧಿಕಾರಕ್ಕೆ ಬಂದರೆ, ನಿಮ್ಮಲ್ಲಿ ಎಷ್ಟು ಆಸ್ತಿ ಇದೆ, ಎಷ್ಟು ಮನೆಗಳಿವೆ ಎಂದು ವಿಚಾರಿಸುವುದಾಗಿ ಕಾಂಗ್ರೆಸ್ನ ರಾಜಕುಮಾರ ಹೇಳುತ್ತಾರೆ. ನಿಮ್ಮಲ್ಲಿ ಪೂರ್ವಿಕರಿಂದ ಬಂದ ಮನೆ ಮತ್ತು ನಗರದಲ್ಲಿ ಒಂದು ಫ್ಲಾಟ್ ಇದ್ದರೆ ಅವೆರೆಡರಲ್ಲಿ ಒಂದನ್ನು ಕಾಂಗ್ರೆಸ್ ಪಕ್ಷ ತೆಗೆದುಕೊಳ್ಳುತ್ತದೆ. ಇದು ಮಾವೋವಾದಿ ಕಮ್ಯೂನಿಸ್ಟರ ಚಿಂತನೆ. ಇದನ್ನು ಭಾರತದಲ್ಲಿ ಜಾರಿಗೊಳಿಸಲು ಹೊರಟಿದ್ದಾರೆ,’ ಎಂದು ನರೇಂದ್ರ ಮೋದಿ ಟೀಕಿಸಿದ್ದಾರೆ.
