ಮಂಗಳೂರು, 21 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ಉಜಿರೆಯಲ್ಲಿ ವಶಕ್ಕೆ ಪಡೆದಿದ್ದಾರೆ.
ಫೇಸ್‌ಬುಕ್‌ನಲ್ಲಿ ಹಂಚಿದ ವಿಡಿಯೋದಲ್ಲಿ ಬಿ.ಎಲ್. ಸಂತೋಷ್ ವಿರುದ್ಧ ಅವಾಚ್ಯ ಶಬ್ಧ ಬಳಸಿದ ಆರೋಪದ ಮೇರೆಗೆ ಬಿಜೆಪಿ ಕಾರ್ಯಕರ್ತ ರಾಜೀವ್ ಕುಲಾಲ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ BSN 196 (1), 352, 353 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣ ದಾಖಲಿಸಿಕೊಂಡಿದ್ದು ಪೋಲಿಸರು ವಿಚಾರಣೆಗೆ ಹಾಜರಾಗುವಂತೆ ತಿಮರೋಡಿಗೆ ಎರಡು ಬಾರಿ ನೋಟಿಸ್ ನೀಡಿದರೂ ಹಾಜರಾಗದ ಹಿನ್ನೆಲೆಯಲ್ಲಿ ಇಂದು ವಶಕ್ಕೆ ಪಡೆದಿದ್ದಾರೆ.
ತಿಮರೋಡಿ, 2012ರ ಧರ್ಮಸ್ಥಳದಲ್ಲಿ ಸೌಜನ್ಯಾ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿರುವ ಹೋರಾಟಗಾರ ಎಂದು ಗುರುತಿಸಿಕೊಂಡಿದ್ದಾರೆ.
ಸೌಜನ್ಯಾ ಹತ್ಯೆ ಪ್ರಕರಣದ ಎಸ್‌ಐಟಿ ತನಿಖೆ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಟೀಕಾತ್ಮಕ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರಿಂದ, ಅದು ಧಾರ್ಮಿಕ ಮೌಲ್ಯಗಳಿಗೆ ಧಕ್ಕೆ ತಂದಿದೆ ಎಂದು ಬಿಜೆಪಿ ಆರೋಪಿಸಿದ ಹಿನ್ನೆಲೆಯಲ್ಲಿ ತಿಮರೋಡಿ, ಬಿಜೆಪಿ ಹಾಗೂ ಬಿ.ಎಲ್.ಸಂತೋಷ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ್ದರು.
ತಿಮರೋಡಿಯ ಬಂಧನವು ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಅವರ ಆರೋಪಗಳು ನೇರವಾಗಿ ಬಿಜೆಪಿಯನ್ನು ಗುರಿಯಾಗಿಸಿಕೊಂಡಿದ್ದು, ವಿಶೇಷವಾಗಿ ಸೌಜನ್ಯಾ ಪ್ರಕರಣದ ತನಿಖೆಯನ್ನು ಮುಚ್ಚಲು ಕುತಂತ್ರ ನಡೆದಿದೆ ಎಂಬ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
