ಬೆಂಗಳೂರು, 11 ನವೆಂಬರ್ (ಹಿ.ಸ.) :
ಆ್ಯಂಕರ್ : ದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ಘೋಷಣೆ ಮಾಡಲಾಗಿದೆ.
ವಿಮಾನ ನಿಲ್ದಾಣಕ್ಕೆ ಬರುವ ಹಾಗೂ ಹೊರಡುವ ಎಲ್ಲಾ ವಾಹನಗಳ ಮೇಲೆ ಕಣ್ಣಿಟ್ಟಿದ್ದು, ಸಿಐಎಸ್‌ಎಫ್ ಶಸ್ತ್ರಸಜ್ಜಿತ ಪಡೆಗಳ ಹೆಚ್ಚುವರಿ ನಿಯೋಜನೆ ಮಾಡಲಾಗಿದೆ.
ವಿಮಾನ ನಿಲ್ದಾಣದ ಒಳ ಹಾಗೂ ಹೊರ ಆವರಣದಲ್ಲಿ ಗಸ್ತು ಬಲಪಡಿಸಲಾಗಿದೆ.
ಪ್ರಯಾಣಿಕರು ಹಾಗೂ ಸಿಬ್ಬಂದಿಗಳ ತಪಾಸಣೆ ಕಟ್ಟುನಿಟ್ಟಾಗಿ ನಡೆಯುತ್ತಿದ್ದು, ಪಾರ್ಕಿಂಗ್ ಪ್ರದೇಶ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿ ಭದ್ರತಾ ಎಚ್ಚರಿಕೆ ಜಾರಿಯಲ್ಲಿದೆ.
ಅದೇ ರೀತಿ ಜನನಿಬಿಡ ಪ್ರದೇಶಗಳಾದ ಮೆಜೆಸ್ಟಿಕ್ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮೆಟ್ರೋ ನಿಲ್ದಾಣ ಬಳಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆ ಜೊತೆಗೆ ಶ್ವಾನದಳದಿಂದ ರೈಲು ನಿಲ್ದಾಣ ಸುತ್ತಮುತ್ತ ಪರಿಶೀಲನೆ ನಡೆಸಲಾಗಿದೆ.
ಮೆಜೆಸ್ಟಿಕ್ ಸುತ್ತಮುತ್ತ ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ಪೊಲೀಸರನ್ನ ನೇಮಿಸಲಾಗಿದೆ. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
