ಮೈಸೂರು,16 ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾಗಿದ್ದು,ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಗುತ್ತಿಗೆದಾರರ ಮನೆಯಲ್ಲಿ ಹಣಪತ್ತೆಯಾಗಿರುವ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ದುಡ್ಡು ವಸೂಲಿ ಮಾಡುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಮುಖ್ಯಮಂತ್ರಿತಗಳು ಉತ್ತರ ನೀಡುತ್ತಾ, ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ. ಯಾರದೋ ಮನೆಯಲ್ಲಿ ಹಣ ಪತ್ತೆಯಾಗಿದ್ದು, ಇದಕ್ಕೆ ರಾಜಕೀಯ ನಂಟು ಹಾಕುವುದು ಸರಿಯಲ್ಲ. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ. ಲೋಕಸಭೆ ಚುನಾವಣೆ ಹಾಗೂ ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ತನಿಖೆಯ ಅವಶ್ಯಕತೆಯಿಲ್ಲ. ಪಂಚರಾಜ್ಯಗಳ ಚುನಾವಣೆಯ ಇರುವುದರಿಂದ ಕಾಂಗ್ರೆಸ್ನ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.
ಸುಳ್ಳು ಹೇಳಿಕೆ :
ಕಾಂಗ್ರೆಸ್ ನಾಯಕರಿಗೆ ದುಡ್ಡು ಸಂಗ್ರಹಿಸುವ ಗುರಿ ನೀಡಿರುವುದಾಗಿ ಬಿಜೆಪಿಯ ಸಿ.ಟಿ.ರವಿಯವರು ಮಾಡಿರುವ ಆರೋಪಕ್ಕೆ ಪ್ರತಿಕ್ರಯಿಸುತ್ತಾ, ಸಿ.ಟಿ.ರವಿಯವರ ಹೇಳಿಕೆಗಳು ಸದಾ ಸುಳ್ಳಿನಿಂದ ಕೂಡಿರುತ್ತದೆ. ಅವರ ಸುಳ್ಳು ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ. ಈ ರೀತಿಯ ಎಲ್ಲ ಆರೋಪಗಳು ಸುಳ್ಳು ಮತ್ತು ಆಧಾರರಹಿತವಾಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್
