ನವದೆಹಲಿ,31ಅಕ್ಟೋಬರ್ (ಹಿ.ಸ):
ಆ್ಯಂಕರ್ :ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ, ಮಾಜಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ಎಸ್.ವಿ.ಎನ್. ಭಟ್ಟಿ ಅವರನ್ನೊಳಗೊಂಡ ನ್ಯಾಯಪೀಠ ಕಳೆದ ಅಕ್ಟೋಬರ್ ೧೭ರಂದು ಕಾಯ್ದಿರಿಸಿದ್ದ ತೀರ್ಪನ್ನು ಇಂದು ಪ್ರಕಟಿಸಿ ಆದೇಶ ಹೊರಡಿಸಿದೆ. ದೆಹಲಿಯಲ್ಲಿ ಈಗ ರದ್ದುಪಡಿಸಲಾಗಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಸಂಬಂಧ ಪ್ರಕರಣ ಇದಾಗಿದೆ. ಹಗರಣದಲ್ಲಿ ಪಾಲ್ಗೊಂಡಿದ್ದ ಆರೋಪದ ಮೇಲೆ ಮನಿಶ್ ಸಿಸೋಡಿಯಾ ಅವರನ್ನು ಕಳೆದ ಫೆಬ್ರವರಿ ೨೬ರಂದು ಸಿಬಿಐ ಬಂಧಿಸಿತ್ತು. ಅಂದಿನಿಂದ ಈವರೆಗೆ ಅವರು, ಕಸ್ಟಡಿಯಲ್ಲಿದ್ದಾರೆ. ಕಳೆದ ಮಾರ್ಚ್ ೯ ರಂದು ಸಿಬಿಐ ಸಲ್ಲಿಸಿದ್ದ ಎಫ್ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದರು. ಫೆಬ್ರವರಿ ೨೮ರಂದು ಸಿಸೋಡಿಯಾ ದೆಹಲಿ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಹಿಂದೂಸ್ತಾನ್ ಸಮಾಚಾರ್
