ನವದೆಹಲಿ, 3 ಫೆಬ್ರವರಿ (ಹಿ.ಸ):
ಆ್ಯಂಕರ್ :ಪ್ರಧಾನಿ ನರೇಂದ್ರ ಮೋದಿ ಇಂದು ಒಡಿಶಾಗೆ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮಧ್ಯಾಹ್ನ ಒಡಿಶಾದ ಸಂಬಲ್ಪುರದಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ, ೬೮ ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ಅನೇಕ ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಕಲ್ಲಿದ್ದಲು ಸಚಿವಾಲಯದ ಅಡಿಯಲ್ಲಿ ನೇವೇಲಿ ಲಿಗ್ನೈಟ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ನ ತಲಾಬಿರಾ ಥರ್ಮಲ್ ಪವರ್ ಪ್ರಾಜೆಕ್ಟ್ಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಸುಮಾರು ೨೭ ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಯೋಜನೆಯು ಪ್ರತಿ ಯೂನಿಟ್ಗೆ ೩.೬೫ ರೂಪಾಯಿ ವೆಚ್ಚದಲ್ಲಿ ವಿದ್ಯುತ್ ಉತ್ಪಾದಿಸಲು ಗಮನ ಹರಿಸಲಾಗುತ್ತಿದೆ ಎಂದು ಕಲ್ಲಿದ್ದಲ್ಲು ಸಚಿವಾಲಯ ತಿಳಿಸಿದೆ.
ಈ ಯೋಜನೆಯು ವಿಶ್ವಾಸಾರ್ಹ, ಕೈಗೆಟುಕುವ ಮತ್ತು ನಿರಂತರ ಶಕ್ತಿಯನ್ನು ಒದಗಿಸುವ ಗುರಿ ಹೊಂದಿದ್ದು, ದೇಶದಲ್ಲಿ ಇಂಧನ ಭದ್ರತೆಗೆ ಮಹತ್ವದ ಕೊಡುಗೆ ನೀಡುತ್ತದೆ. ಅಲ್ಲದೆ, ಆರ್ಥಿಕ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸಚಿವಾಲಯ ಹೇಳಿದೆ.
ಇದಲ್ಲದೇ ಹಲವಾರು ವಿದ್ಯುತ್ ಯೋಜನೆಗಳಿಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ.
ಸುಮಾರು ೨ ಸಾವಿರದ ೧೧೦ ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ರಾಷ್ಟ್ರೀಯ ಹೆದ್ದಾರಿಗಳ ಮೂರು ರಸ್ತೆ ವಲಯದ ಯೋಜನೆಗಳನ್ನೂ ಪ್ರಧಾನಿ ಉದ್ಘಾಟಿಸಲಿದ್ದಾರೆ. ಜತೆಗೆ ಸುಮಾರು ೨ ಸಾವಿರದ ೧೪೬ ಕೋಟಿ ರೂಪಾಯಿ ಮೌಲ್ಯದ ರೈಲ್ವೆ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ.
ನಾಳೆ ಅಸ್ಸಾಂಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ, ಗುವಾಹಟಿಯಲ್ಲಿ ೧೧ ಸಾವಿರ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಪ್ರಧಾನಮಂತ್ರಿಯವರು ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂಲಸೌಕರ್ಯ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ, ಸಾರ್ವಜನಿಕ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳಲಿದ್ದಾರೆ.
