ಕೊಪ್ಪಳ, 16 ಅಕ್ಟೋಬರ್ (ಹಿ.ಸ):
ಆ್ಯಂಕರ್: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳಡಿ ಬರುವ ಎಲ್ಲ ಇಲಾಖೆಗಳು ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಯ ಲಾಭ ಒದಗಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ವಿವಿಧ ಇಲಾಖಾ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಭಾಗ್ಯಲಕ್ಷ್ಮೀ ಯೋಜನೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅರಿವು ಯೋಜನೆ, ಸ್ವ ಉದ್ಯೋಗ ಯೋಜನೆ, ಶ್ರಮ ಶಕ್ತಿ ಯೋಜನೆ ಮುಂತಾದ ಯೋಜನೆಗಳ ಬಗ್ಗೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆ ಕುರಿತು ತಿಳುವಳಿಕೆ ನೀಡಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಿಗಬೇಕು. ಮುಖ್ಯವಾಗಿ ಶಾಲೆಯಿಂದ ಹೊರಗುಳಿದ ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಶಿಷ್ಯವೇತನ, ತಾಂತ್ರಿಕ ಪದವಿ, ವೈದ್ಯಕೀಯ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಇರುವ ಶೈಕ್ಷಣಿಕ ಸಾಲದ ಸೌಲಭ್ಯದ ಕುರಿತು ಅರಿವು ಮೂಡಿಸಬೇಕು. ಅಲ್ಪ ಸಂಖ್ಯಾತ ಸಮುದಾಯದ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ, ಬೈಸಿಕಲ್ ಮುಂತಾದ ಸೌಲಭ್ಯಗಳು ಸಿಗಬೇಕು. ಸರ್ಕಾರದಿಂದ ನಿರ್ದಿಷ್ಟ ಕಾರ್ಯಕ್ರಮಕ್ಕೆ ಬಿಡುಗಡೆಯಾಗುವ ಅನುದಾನವನ್ನು ಕಾಲಮಿತಿಯಲ್ಲಿ ಸೂಕ್ತ ರೀತಿಯಲ್ಲಿ ಬಳಕೆ ಮಾಡಿ, ನಿಗದಿತ ಗುರಿ ಸಾಧಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುವ ಸ್ವ ಉದ್ಯೋಗ, ಶ್ರಮ ಶಕ್ತಿ ಮುಂತಾದ ಸ್ವಾವಲಂಬಿ ಯೋಜನೆ ಹಾಗೂ ಕೌಶಲ್ಯ ಆಧಾರಿತ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು. ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗಾಗಿ ಇರುವ ಯೋಜನೆ/ಕಾರ್ಯಕ್ರಮಗಳ ಸೂಕ್ತ ಮೇಲ್ವಿಚಾರಣೆಯನ್ನು ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ನೋಡಿಕೊಳ್ಳಬೇಕು. ಬ್ಯಾಂಕ್ ಸಾಲದ ಮೂಲಕ ಫಲಾನುಭವಿಗೆ ದೊರೆಯಬೇಕಾದ ಯೋಜನೆ ಸೌಲಭ್ಯವನ್ನು ಲೀಡ್ ಬ್ಯಾಂಕ್ ಸಹಯೋಗದಲ್ಲಿ ಒದಗಿಸಿಕೊಡಬೇಕು. ಒಟ್ಟಿನಲ್ಲಿ ಯಾವುದೇ ಇಲಾಖೆಯಲ್ಲಿ ಅರ್ಹರಿಗಾಗಿ ಇರುವ ಸೌಲಭ್ಯವನ್ನು ಅರ್ಹ ಫಲಾನುಭವಿಯನ್ನು ಗುರುತಿಸಿ ಒದಗಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯರಾಣಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುರೇಶ ಕೋಕರೆ, ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
