ಮೈಸೂರು,23ಅಕ್ಟೋಬರ್ (ಹಿ.ಸ):
ಆ್ಯಂಕರ್ :
ದಸರಾ ಹಬ್ಬ ಮುಗಿಯುವುದರೊಳಗಾಗಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕವಾಗಲಿದೆ ಎಂಬ ನಿರೀಕ್ಷೆ ಜೋರಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ಮಹಿಳೆಯೋರ್ವರು ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿಯಬಹುದು ಎಂಬ ಮಾತು ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇನ್ನು ಬಗ್ಗೆ ಸ್ವತಃ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ನಾನು ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ. ನನಗೆ ಒಳ್ಳೇ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೇ ಕೆಲಸ ಮಾಡುತ್ತಿದ್ದೇನೆ. ನನಗೆ ವರಿಷ್ಠರಿಂದಲೂ ಯಾವ ಸೂಚನೆ ಬಂದಿಲ್ಲ. ಇಂತಹ ಸುದ್ದಿ ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ. ಮುಂದೆಯೂ ಮೋದಿ ಪ್ರಧಾನಿಯಾಗಬೇಕು ಎನ್ನುವುದು ನನ್ನ ಇಚ್ಛೆ. ಮೋದಿ ಮತ್ತೆ ಪ್ರಧಾನಿ ಆಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದದರು.
ಹಿಂದೂಸ್ತಾನ್ ಸಮಾಚಾರ್
