ಕೊಪ್ಪಳ, 10 ನವೆಂಬರ್ (ಹಿ.ಸ):
ಆ್ಯಂಕರ್ : ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿಗಳಿಂದಾಗುವ ಶಬ್ದ ಮತ್ತು ವಾಯುಮಾಲಿನ್ಯವನ್ನು ನಿಯಂತ್ರಿಸಲು ಸರ್ವೋಚ್ಛ ನ್ಯಾಯಾಲಯವು ನೀಡಿರುವ ಆದೇಶದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ತಿಳಿಸಿದ್ದಾರೆ.
ನವೆಂಬರ್-2023 ರಲ್ಲಿ ದೀಪಾವಳಿ ಹಬ್ಬವನ್ನು ಸಿಡಿಮದ್ದು ಪಟಾಕಿಗಳನ್ನು ಸಿಡಿಸುವುದರ ಮೂಲಕ ಆಚರಣೆ ಮಾಡಲಾಗುತ್ತದೆ. ಈ ರೀತಿಯಾಗಿ ಪಟಾಕಿಗಳನ್ನು ಸಿಡಿಸುವುದರಿಂದ ವಾಯುಮಾಲಿನ್ಯವು ಹೆಚ್ಚಾಗುವುದಲ್ಲದೇ, ಶಬ್ಧಮಾಲಿನ್ಯವೂ ಉಂಟಾಗುತ್ತಿದ್ದು ಹೆಚ್ಚಾದ ಶಬ್ಧಮಾಲಿನ್ಯದಿಂದ ಮನುಷ್ಯನ ಮತ್ತು ಜೀವ ಸಂಕುಲಗಳ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುತ್ತಿರುವುದು ದೇಶದಾದ್ಯಂತ ನಡೆಸಿದ ಅಧ್ಯಯನದಿಂದ ಸಾಬೀತಾಗಿದೆ. 2018 ರ ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಅSIಖ-ಓಇಇಖI ಇವರು ಶಿಫಾರಸ್ಸು ಮಾಡಿದ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಸರ್ವೋಚ್ಛ ನ್ಯಾಯಾಲಯವು ಸ್ಪಷ್ಟ ನಿರ್ದೇಶನಗಳನ್ನು ನೀಡಿದೆ.
ಅದರಂತೆ ಜಿಲ್ಲಾ ಅಗ್ನಿಶಾಮಕ ಪಡೆಯ ಅಧಿಕಾರಿ, ಸ್ಥಳೀಯ ಸಂಸ್ಥೆಯ ಆರೋಗ್ಯಾಧಿಕಾರಿಗಳು, ತಹಶೀಲ್ದಾರರು, ಜಿಲ್ಲಾ ಪರಿಸರ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಆಸಕ್ತ ನಾಗರಿಕರು ಹಾಗೂ ಸ್ಥಳೀಯ ಸರ್ಕಾರೇತರ ಸಂಘ-ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆಗಳನ್ನು ರಚಿಸಿ, ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸುವುದು ಹಾಗೂ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಇನ್ನಿತರೆ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಅಂತಹ ಗೋದಾಮುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಅದಕ್ಕೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಬೇಕು.
ಎಲ್ಲಾ ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ಗಳ ಮೇಲೆ ಹಸಿರು ಪಟಾಕಿಯ ಚಿನ್ಹೆಯಿರುತ್ತದೆ ಹಾಗೂ ಕ್ಯೂ.ಆರ್.ಕೋಡ್ ಸಹ ಇರುತ್ತದೆ. ಚಿನ್ಹೆಯ ಬಗ್ಗೆ ಸಂಬಂಧಪಟ್ಟ ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತ ಪಡಿಸಿಕೊಳ್ಳಬೇಕು. ಚಿನ್ಹೆ ಇಲ್ಲದ ಪಟಾಕಿ ಹಸಿರು ಪಟಾಕಿ ಎಂದು ಪರಿಗಣಿಸಲಾಗುವುದಿಲ್ಲ. ಅಂತಹವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು.
ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಮತ್ತು ಪ್ರಮುಖವಾಗಿ ಹಸಿರು ಪಟಾಕಿ ಮಳಿಗೆಯಲ್ಲಿ ಮಾರಾಟ ಮಾಡುವವರಿಗೆ ಮಾತ್ರ ಅನುಮತಿ ನೀಡಬೇಕು. ಯಾವುದೇ ಹಸಿರು ಪಟಾಕಿಗಳ ಪ್ಯಾಕೆಟ್ಗಳನ್ನು ರ್ಯಾಂಡಮ್ ಆಗಿ ಸಂಗ್ರಹಿಸಿ, ನಿಗದಿತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ದ ಮಟ್ಟವನ್ನು ಮಾಪನ ಮಾಡುವುದು ಮತ್ತು ನಿಗದಿತ ಗುಣಮಾಪನಗಳಿಗೆ ಸರಿ ಹೊಂದದಿದ್ದಲ್ಲಿ ಅವುಗಳನ್ನು ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು.
ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ-ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಎಚ್ಚರಿಕೆಯಿಂದ ಬಳಸಬೇಕು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನಗಳ ಕುರಿತಂತೆ ಸಾರ್ವಜನಿಕರಿಗೆ ಮತ್ತು ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಬೇಕು.
ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಹಾಗೂ ಇನ್ನಾವುದೇ ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸ್ಪೋಟಿಸುವಂತಿಲ್ಲ ಅಥವಾ ಬಳಸುವಂತಿಲ್ಲ. ಎಲ್ಲಾ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆಗಳು ಇದನ್ನು ಕಡ್ಡಾಯವಾಗಿ ಪಾಲಿತಕ್ಕದ್ದು.
ಪರಿಸರ ಸ್ನೇಹಿಯಾಗಿ ದೀಪಾವಳಿ ಹಬ್ಬದ ಆಚರಣೆ ಕುರಿತು ಸಾರ್ವಜನಿಕ ಸ್ಥಳಗಳಾದ ರೈಲ್ವೇ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಕರಪತ್ರ/ಭಿತ್ತಿಪತ್ರಗಳನ್ನು ಹಚ್ಚುವ ಮೂಲಕ ಹಾಗೂ ವಿಡಿಯೋ ಮತ್ತು ಆಡಿಯೋ ಮುಖಾಂತರ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೂಚಿಸಲಾಗಿದೆ.
ಸ್ಥಳೀಯ ಟಿ.ವಿ ಹಾಗೂ ರೇಡಿಯೋ ಮುಖಾಂತರ ಸಾರ್ವಜನಿಕರಿಗೆ ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸುವ ಬಗ್ಗೆ ಜಾಗೃತಿ ಮೂಡಿಸಬೇಕು. ದೀಪಾವಳಿ ಹಬ್ಬದ ಸಮಯದಲ್ಲಿ ಉತ್ಪಾದನೆಯಾಗುವಂತಹ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸೂಕ್ತ ಕ್ರಮ ಜರುಗಿಸಲು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ.
ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಟ ಮಾಡುತ್ತಿದ್ದಲ್ಲಿ ಅಂತಹವುಗಳನ್ನು ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯವರಿಂದ ರಾಜ್ಯದ ಗಡಿಗಳಲ್ಲಿರುವ ತಮ್ಮ ತಮ್ಮ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗೂ ಸಂಬಂಧಿತ ವಸ್ತುಗಳನ್ನು ಮತ್ತು ಸಾಗಾಟ ಮಾಡುವ ವಾಹನಗಳನ್ನು ಸಾರಿಗೆ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳಬೇಕು ಮತ್ತು ಇದಕ್ಕೆ ಅವಶ್ಯಕತೆ ಇದ್ದಲ್ಲಿ ಸಂಬಂಧಪಟ್ಟ ಇಲಾಖೆಗಳ ಸಹಯೋಗವನ್ನು ಪಡೆದುಕೊಳ್ಳಬಹುದು.
ಮೇಲೆ ತಿಳಿಸಿರುವಂತೆ ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ / ಸಿಡಿಮದ್ದುಗಳ ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವ ಹಾಗೂ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ತಯಾರು / ಸಂಗ್ರಹಣೆ/ ಮಾರಾಟ ಮಾಡುವ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಈ ಮೂಲಕ ಆದೇಶಿಸಲಾಗಿದೆ. ಈ ಅಧಿಸೂಚನೆಯಂತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿಷೇಧಿತ ಪಟಾಕಿ / ಸಿಡಿಮದ್ದುಗಳ ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವ ಮತ್ತು ನಿಷೇಧಿಸುವುದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ದಿ ಕೋಶ, ಕೊಪ್ಪಳ ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
