ಬೆಂಗಳೂರು, 1 ಜನವರಿ(ಹಿ.ಸ):
ಆ್ಯಂಕರ್ :ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಆಯಾ ಕ್ಷೇತ್ರಗಳ ಮುಖಂಡರ ಅಭಿಪ್ರಾಯವನ್ನು ಜೆಡಿಎಸ್ ಸಂಗ್ರಹಿಸುತ್ತಿದೆ. ಕಳೆದ ಒಂದು ವಾರದಿಂದಲೂ ಪಕ್ಷದ ಮುಖಂಡರೊಂದಿಗೆ ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದಾರೆ.
ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದ್ದು, ಗೆಲ್ಲಲು ಸಾಧ್ಯವಿರುವ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಲು ತೀರ್ಮಾನಿಸಿದೆ. ಹೀಗಾಗಿ ಸ್ಪರ್ಧೆ ಮಾಡಲಿರುವ ಕ್ಷೇತ್ರಗಳ ಪ್ರಮುಖ ಮುಖಂಡರು, ಕಾರ್ಯಕರ್ತರೊಂದಿಗೆ ಅಭ್ಯರ್ಥಿ ಗಳ ಆಯ್ಕೆ ಚುನಾವಣೆ ಕಾರ್ಯ ತಂತ್ರದ ಬಗ್ಗೆ ನಿರಂತರ ಸಮಾಲೋಚನೆಯನ್ನು ಕುಮಾರಸ್ವಾಮಿ ನಡೆಸುತ್ತಿದ್ದಾರೆ.
ಮಕರ ಸಂಕ್ರಾಂತಿ ಹಬ್ಬದ ನಂತರ ಸ್ರ್ಪಧಿಸಲಿರುವ ಕ್ಷೇತ್ರಗಳ ಪ್ರಕಟ ಹಾಗೂ ಸಂಭವನೀಯ ಅಭ್ಯರ್ಥಿಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಸ್ಪರ್ಧೆಗಿಳಿಯಲು ನಿರ್ಧರಿಸಿದೆ. ಜೆಡಿಎಸ್ ಪ್ರಾಬಲ್ಯವಿರುವ ಹಾಸನ, ಮಂಡ್ಯ, ತುಮಕೂರು ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿಯುವ ಇಚ್ಛೆಯನ್ನು ಬಿಜೆಪಿಯ ವರಿಷ್ಠರ ಗಮನಕ್ಕೆ ತರಲಾಗಿದೆ.
ಹಿಂದೂಸ್ತಾನ್ ಸಮಾಚಾರ್
