ಬೆಂಗಳೂರು,ಆ್ಯಂಕರ್: ‘ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಮಹಿಳೆಯರು ದಾರಿ ತಪ್ಪಿದ್ದಾರೆ’ ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಯನ್ನು ಲೋಕಸಭಾ ಚುನಾವಣೆಗೆ ಪ್ರಮುಖ ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ತೀರ್ಮಾನಿಸಿದೆ. ಅಲ್ಲದೆ, ಚುನಾವಣೆ ಮುಗಿಯುವವರೆಗೂ ಈ ವಿಷಯ ಜೀವಂತವಾಗಿಡಲು ನಿರ್ಧರಿಸಿದೆ.
ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ರಾತ್ರಿ ಜೂಮ್ ಆ್ಯಪ್ ಮೂಲಕ ಸಭೆ ನಡೆಸಿ ಕುಮಾರಸ್ವಾಮಿ ಅವರ ಹೇಳಿಕೆ ವಿರುದ್ಧ ಸೋಮವಾರದಿಂದಲೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ತಮ್ಮ ಪಕ್ಷದ ಎಲ್ಲಾ ಮುಂಚೂಣಿ ಘಟಕಗಳು, ಜಿಲ್ಲಾ ಘಟಕಗಳ ಪದಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರುಗಳು, ಮುಖಂಡರುಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಅಲ್ಲದೆ, ಮಹಿಳೆಯರ ಬಗ್ಗೆ ಕುಮಾರಸ್ವಾಮಿ ಅವರು ಅವಮಾನಕರ ರೀತಿಯಲ್ಲಿ ಹೇಳಿಕೆ ನೀಡಿರುವುದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗ ಮತ್ತು ರಾಜ್ಯ ಮತ್ತು ಕೇಂದ್ರ ಮಹಿಳಾ ಆಯೋಗಗಳಿಗೆ ದೂರು ನೀಡಲು ಕೂಡ ಸೂಚಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
