ಮುಂಬೈ:
ಲೋಕಸಭಾ ಚುನಾವಣೆ ಇರುವಾಗಲೇ ಔರಾದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸದ್ಯ ಶಾಸಕ ಪ್ರಭು ಚೌಹಾಣ್ ಅವರು ಮಹಾರಾಷ್ಟ್ರದ ಮುಂಬೈನ ಬಾಂದ್ರಾ ಆಸ್ಪತ್ರೆ ಒಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕಿರು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಯಶಸ್ವಿಯಾಗಿದೆ. ಪ್ರಭು ಚೌಹಾಣ್ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಈಗಾಗಲೇ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇನ್ನೆರಡು ದಿನಗಳಲ್ಲಿ ಗುಣಮುಖರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಪ್ರಭು ಚೌಹಾಣ್ ಅವರಿಗೆ ನಿನ್ನೆ ಸಂಜೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 3 ದಿನಗಳ ಹಿಂದೆ ಮುಂಬೈ ನಗರಕ್ಕೆ ತೆರಳಿದ್ದ ಪ್ರಭು ಚೌಹಾಣ್ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು.
