ಬೆಂಗಳೂರು, 20 ಡಿಸೆಂಬರ್(ಹಿ.ಸ):
ಆ್ಯಂಕರ್ :
ಪಂಚ ರಾಜ್ಯಗಳ ಚುನಾವಣೆ ಮುಗಿದು ಅಲ್ಲಿ ನೂತನ ಸರ್ಕಾರಗಳು ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸೀಟು ಹಂಚಿಕೆ ವಿಚಾರ ಮುನ್ನೆಲೆಗೆ ಬಂದಿದೆ. ಈ ಸಂಬಂಧ ಬಿಜೆಪಿ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿ ಅಂತಿಮಗೊಳಿಸಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಶೀಘ್ರದಲ್ಲಿಯೇ ದೆಹಲಿಯೇ ತೆರಳುವ ಸಾಧ್ಯತೆ ಇದೆ.
ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ವಿದೇಶಕ್ಕೆ ತೆರಳಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ನಗರಕ್ಕೆ ಹಿಂತಿರುಗಿದ್ದಾರೆ. ಸೀಟು ಹಂಚಿಕೆ ವಿಚಾರವಾಗಿ ಪಕ್ಷದ ಕೆಲವು ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ದೆಹಲಿಗೆ ತೆರಳುವ ನಿರೀಕ್ಷೆ ಇದೆ. ಸಂಸತ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರ ಸಮಯ ಸಿಗಲಿದೆ. ಅಲ್ಲದೇ, ಅಧಿವೇಶನದಲ್ಲಿ ಭಾಗವಹಿಸಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸಹ ದೆಹಲಿಯಲ್ಲಿಯೇ ತಂಗಿದ್ದಾರೆ. ಹೀಗಾಗಿ ಬಿಜೆಪಿ ವರಿಷ್ಠರ ಜತೆ ಸಮಾಲೋಚನೆ ನಡೆಸಲು ಸೂಕ್ತ ಸಮಯ ಇದಾಗಿದೆ ಎಂಬ ಕಾರಣಕ್ಕಾಗಿ ಶೀಘ್ರದಲ್ಲಿಯೇ ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಿಂದೂಸ್ತಾನ್ ಸಮಾಚಾರ್
